ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು ಗಾಳಿ ಸಹಿತ ಭಾರಿ ಮಳೆಯಾಗಿದೆ.
ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಚೆಟ್ಟಳ್ಳಿ, ಮೂರ್ನಾಡು, ಭಾಗಮಂಡಲ ಮತ್ತು ದಕ್ಷಿಣ ಕೊಡಗಿನ ಇರ್ಪು, ಶ್ರೀಮಂಗಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕುಶಾಲನಗರ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆಯೂ ದಾಖಲಾಗಿದೆ.
ಮಾರ್ಚ್ 28 ರಿಂದ ಮುಂದಿನ 4-5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಲ್ಲಿ ಸಂತಸವಿದ್ದರೂ, ಮರಗಳು ಬಿದ್ದು ಹಾನಿಯಾಗುವ ಭೀತಿ ಎದುರಾಗಿದೆ.
ಅವಾಂತರ : ಗಾಳಿ ಸಹಿತ ಸುರಿದ ಭಾರಿ ಮಳೆಗೆ ಭಾಗಮಂಡಲ – ತಲಕಾವೇರಿ ರಸ್ತೆಗೆ ಅಡ್ಡಲಾಗಿ ಮರವೊಂದು ಬಿದ್ದು ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತು. ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು. ಇದಲ್ಲದೆ ಕೆಲವು ಕಡೆ ಬಿರುಗಾಳಿಗೆ ಮರಗಳು ಧರೆಗುರುಳಿ, ವಿದ್ಯುತ್ ಟ್ರಾನ್ಸ್ಫಾರ್ಮರ್ ಮೇಲೆ ಬಿದ್ದು ಹಾನಿಯಾಗಿರುವ ಕುರಿತು ವರದಿಯಾಗಿದೆ.
ಇನ್ನು ಮಲೆನಾಡು ಮತ್ತು ದಕ್ಷಿಣ ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಗುಡುಗು ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಮತ್ತು ಒಣಗಿದ ಮರಗಳ ಕೆಳಗೆ ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.







