Breaking News :

ಮುಂಗಾರು; ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ 

 


ಜನವಾಹಿನಿ NEWS ಮಡಿಕೇರಿ : ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ, ತೆಂಗಿನ ಚಿಪ್ಪು, ಟೈರು, ಹೂಕುಂಡದಲ್ಲಿ ನೀರು ನಿಲ್ಲದಂತೆ ಗಮನ ಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾತಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾರ್ಚ್ 2026ರ ವರೆಗೆ ಜಿಲ್ಲೆಯಲ್ಲಿ ಒಂದು ಪ್ರಕರಣ ಕಂಡು ಬಂದಿದ್ದು, ಸೋಮವಾರಪೇಟೆ ತಾಲ್ಲೂಕಿನ 16,860 ಮಂದಿಯ ರಕ್ತ ಪರೀಕ್ಷೆಯಲ್ಲಿ 1 ಪ್ರಕರಣ ಕಂಡುಬಂದಿದ್ದು, ಗುಣಮುಖರಾಗಿದ್ದಾರೆ ಎಂದರು.

ಮಲೇರಿಯ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಶೀಘ್ರ ಪತ್ತೆಗಾಗಿ ರಕ್ತ ಲೇಪನಗಳ ಪರೀಕ್ಷೆ, ಜಿಲ್ಲೆಯ ವಲಸಿಗರ ಮತ್ತು ಹೊರ ರಾಜ್ಯದ ವಲಸಿಗರ ಸಮೀಕ್ಷೆ, ವಿವಿಧ ಕಾರ್ಯಕ್ರಮ ಮೂಲಕ ಜಾಗೃತಿ ಮೂಡಿಸುವುದು, ಮಲೇರಿಯ ಪತ್ತೆಯಾದ ಗ್ರಾಮ/ ಪ್ರದೇಶಗಳಲ್ಲಿ ರಕ್ತ ಲೇಪ ಸಂಗ್ರಹ ಮತ್ತು ಐ.ಇ.ಸಿ ಚಟುವಟಿಕೆಗಳು, ಸ್ವಚ್ಛ ನೀರಿನ ತಾಣಗಳಿಗೆ ಲಾರ್ವಾಹಾರಿ ಮೀನು (ಗಪ್ಪಿ ಮತ್ತು ಗ್ಯಾಂಬೂಸಿಯ) ಬಿಡುಗಡೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್/ ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಇಲಾಖೆಯ ಮೂಲಕ ಸೊಳ್ಳೆ ಉತ್ಪತ್ತಿ ತಾಣಗಳ ನಿವಾರಣೆ ಹಾಗೂ ಗ್ರಾಮ ನೈರ್ಮಲ್ಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು, ನೀರು ಸರಬರಾಜು ಮಾಡುವ ತೊಟ್ಟಿಗಳನ್ನು ಭದ್ರವಾಗಿ ಮುಚ್ಚುವುದು, ನಗರಾಭಿವೃದ್ಧಿ ಇಲಾಖೆಯಿಂದ ಫ್ಲೆಕ್ಸ್, ಪೋಸ್ಟರ್, ಬಿತ್ತಿಪತ್ರಗಳ ಮೂಲಕ ಮಾಹಿತಿ ನೀಡುವುದು, ನೀರು ಸರಬರಾಜು ಪೈಪುಗಳನ್ನು ಕಾಲಕಾಲಕ್ಕೆ ಪರೀಕ್ಷಿಸಲಾಗುವುದು, ನೀರಾವರಿ ಇಲಾಖೆಯಿಂದ ನೀರಾವರಿ ಯೋಜನೆಗಳಡಿ ಕೆಲಸಕ್ಕಾಗಿ ಬರುವ ಕಾರ್ಮಿಕರ ಬಗ್ಗೆ ಮುಂಚಿತವಾಗಿ ಆರೋಗ್ಯ ಇಲಾಖೆಗೆ ತಿಳಿಸಲಾಗುವುದು ಡಾ.ಸತೀಶ್ ಕುಮಾರ್ ಅವರು ತಿಳಿಸಿದರು.

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯಲು ಹೆಣ್ಣು ಮಕ್ಕಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್‍ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆ ನೀಡಲಾಗುತ್ತಿದ್ದು, ವಿದ್ಯಾರ್ಥಿನಿಯರಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಈ ಬಗ್ಗೆ ಹೆಚ್ಚು ಗಮನ ಸೆಳೆಯಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ, 14 ವರ್ಷ ವಯಸ್ಸಿನ ಹುಡುಗಿಯರು (ತಮ್ಮ 14ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡವರು ಆದರೆ ಇನ್ನೂ 15ನೇ ಹುಟ್ಟು ಹಬ್ಬ ಆಚರಿಸದವರು) ಲಸಿಕೆ ಪಡೆಯಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕ್ರಮಗಳನ್ನು ಯಶಸ್ವಿಯಾಗಿ ಕಾರ್ಯಗತ ಮಾಡದೇ ಇದ್ದಲ್ಲಿ 2030ರ ವೇಳೆಗೆ ಸರಿ ಸುಮಾರು 8 ಲಕ್ಷ ಹೊಸ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ವಾರ್ಷಿಕವಾಗಿ ಸಂಭವಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಿರುವುದರಿಂದ ಜಿಲ್ಲೆಯಲ್ಲಿ ಹೆಚ್ಚು ಜಾಗೃತಿಯ ಅಗತ್ಯ ಇದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ ಈ ಬಗ್ಗೆ ವಿದ್ಯಾರ್ಥಿನಿಯರಿಗೆ ಒತ್ತಡ ಹೇರದೆ, ಅವರ ಮನ ಒಲಿಸಿ, ವಿಶ್ವಾಸಕ್ಕೆ ತೆಗೆದುಕೊಂಡು ಇಲಾಖಾಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ. ಹೆಣ್ಣುಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ, ಪೋಷಕರಿಗೆ ಹಾಗೂ ಧರ್ಮಗುರುಗಳು ಸಮುದಾಯ ಬಾಂಧವರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.

ಜಿಲ್ಲೆಯ 29 ಗ್ರಾ.ಪಂ. ಟಿಬಿ ಮುಕ್ತಗೊಳಿಸಲಾಗಿದ್ದು, ಶೇಕಡವಾರು ಪ್ರಗತಿ ಸಾಧಿಸಲು ಹೆಚ್ಚಿನ ಜಾಗೃತಿ ಮೂಡಿಸಲಾಗಿದೆ. ಈ ನಿಟ್ಟಿನಲ್ಲಿ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದರು. ಸಭೆಯಲ್ಲಿ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನದ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳು ಇದ್ದರು.

 

Share this article

ಟಾಪ್ ನ್ಯೂಸ್

More News