ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಅಪಪ್ರಚಾರ ಮಾಡುವವರ ವಿರುದ್ಧ ಕ್ರಮಕ್ಕೆ ಒತ್ತಾಯ
ಮಡಿಕೇರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮತ್ತು ಭಕ್ತರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಮಡಿಕೇರಿಯಲ್ಲಿ ಪ್ರತಿಭಟನಾ ಜಾಥ ನಡೆಸಿತು.
ವೇದಿಕೆಯ ಸಂಚಾಲಕ ಅಗೋಳಿಕಜೆ ಧನಂಜಯ ಜಾಥಾದ ನೇತೃತ್ವದಲ್ಲಿ ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಜಾಥ ನಡೆಸಿದ ಪ್ರತಿಭಟನಾಕಾರರು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದರಲ್ಲದೆ ಅಶಾಂತಿ ಉಂಟು ಮಾಡುತ್ತಿರುವವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ಬಗ್ಗೆ ಆಧಾರ ರಹಿತ ಆರೋಪ ಮಾಡಲಾಗುತ್ತಿದ್ದು, ಇದರಿಂದ ಭಕ್ತರಿಗೆ ನೋವುಂಟಾಗಿದೆ. ಯುವ ಜನಾಂಗದಲ್ಲಿ ಕೋಮು ಭಾವನೆ ಮೂಡುತ್ತಿದ್ದು, ಸಮಾಜದಲ್ಲಿ ಅಶಾಂತಿಯ ವಾತವರಣ ನಿರ್ಮಾಣವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾನಿರತರು ಪರಿಸ್ಥಿತಿ ಕೈಮೀರುವ ಮೊದಲು ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಆಗ್ರಹಿಸಿದರು.
ಇದೆ ವೇಳೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮೂಲಕ ಸರಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ದೈವ ನರ್ತಕರ ಸಂಘದ ಅಧ್ಯಕ್ಷ ರವಿ ಮೊಗೇರ, ಹಿರಿಯರಾದ ಕೆ.ಎಸ್.ದೇವಯ್ಯ, ದೀರ್ಘಕೇಶಿ ಶಿವಣ್ಣ, ಸಂಘಟಕರಾದ ಕೆ.ಕೆ.ಮಹೇಶ್ ಕುಮಾರ್, ರಮೇಶ್ ಹೊಳ್ಳ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ೨೦೦ಕ್ಕೂ ಅಧಿಕ ಸಂಖ್ಯೆಯಲ್ಲಿ ಧರ್ಮಸ್ಥಳ ಭಕ್ತಾಭಿಮಾನಿಗಳು ಆಗಮಿಸಿದ್ದರು.








