ವಿರಾಜಪೇಟೆ : ರೂ.50 ಲಕ್ಷ ವೆಚ್ಚದ ರಸ್ತೆ, ಸೇತುವೆ ಉದ್ಘಾಟನೆ
ಮಡಿಕೇರಿ : ವಿರಾಜಪೇಟೆ ತಾಲ್ಲೂಕಿನಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದ ರಸ್ತೆ ಹಾಗೂ ಸೇತುವೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು.
ಕೊಂಡಗೇರಿಯಲ್ಲಿ 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ರಸ್ತೆ, ಹಾಲುಗುಂದದಲ್ಲಿ 15 ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಸೇತುವೆ, ಚೆಂಬೆಬೆಳ್ಳೂರು ಗ್ರಾ.ಪಂ.ವ್ಯಾಪ್ತಿಯ ದೇವಣಗೇರಿಯಲ್ಲಿ 10 ಲಕ್ಷ ರೂ. ವೆಚ್ಚದ ರಸ್ತೆ, ಕದನೂರು ಗ್ರಾ.ಪಂ.ವ್ಯಾಪ್ತಿಯ ಚಾಮಿಯಾಲ ಬಳಿ 10 ಲಕ್ಷ ರೂ. ವೆಚ್ಚದ ರಸ್ತೆ ಸೇರಿದಂತೆ ಒಟ್ಟು 50 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ. ಸರ್ಕಾರ ಇದಕ್ಕಾಗಿ ಹೆಚ್ಚಿನ ಅನುದಾನ ಒದಗಿಸಿದೆ. ಮಳೆಯಿಂದ ಗುಂಡಿ ಬಿದ್ದ ರಸ್ತೆಯನ್ನು ಸಹ ಸರಿಪಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಮುಖವಾಗಿ ಗ್ರಾಮೀಣ ರಸ್ತೆ, ವಿದ್ಯುತ್ ಸಂಪರ್ಕಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹಂತ ಹಂತವಾಗಿ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು ಎಂದು ಎ.ಎಸ್.ಪೊನ್ನಣ್ಣ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಹೆಚ್ಚಿನ ಅನುದಾನ ನೀಡಲಿದ್ದಾರೆ. ಆ ನಿಟ್ಟಿನಲ್ಲಿ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ಬಳಿಕ ಕುಂಜಲಗೇರಿಯಲ್ಲಿ ಅರಣ್ಯ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. .
ಅರಣ್ಯ ಸಂಪತ್ತು ಉಳಿಸಿದಲ್ಲಿ ನಾಡು ಸಮತೋಲನದಿಂದ ಇರಲು ಸಾಧ್ಯ. ಆ ನಿಟ್ಟಿನಲ್ಲಿ ಗಿಡಮರಗಳನ್ನು ಮತ್ತಷ್ಟು ಬೆಳೆಸಬೇಕು. ಇದರಿಂದ ಜಲಮೂಲ ಹೆಚ್ಚಾಗಲಿದೆ ಎಂದರು.
‘ವನ ಮಹೋತ್ಸವವು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರೂ ಗಿಡವನ್ನು ಬೆಳೆಸಬೇಕು. ಅರಣ್ಯ ಸಂಪತ್ತು ಇದ್ದಲ್ಲಿ ಮಾನವ ಸಂಪತ್ತು ಹೆಚ್ಚಲಿದೆ ಎಂದು ವಿವರಿಸಿದರು.’
ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸುವತ್ತ ಗಮನಹರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಅಧಿಕಾರಿಗಳು, ಎಂಜಿನಿಯರ್‍ಗಳು ಇತರರು ಇದ್ದರು.








