ತ್ರಿವೇಣಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ
ವಿರಾಜಪೇಟೆ : ಪಟ್ಟಣದ ತ್ರಿವೇಣಿ ಶಾಲೆಯಲ್ಲಿ ನೂತನ ವಿದ್ಯಾರ್ಥಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಈ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಜರುಗಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷರಾದ ಕುಂಬೆರ ಮನು ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಮಕ್ಕಳಲ್ಲಿ ಪ್ರೀತಿ, ಅನುಕಂಪ, ಸಹನೆ ಹಾಗೂ ಉದಾತ್ತ ಗುಣಗಳು ಬೆಳೆಯಬೇಕು. ಪರಸ್ಪರ ಸಹಕಾರ, ಸೌಹಾರ್ದತೆಯಿಂದ ಬಾಳ್ವೆ ನಡೆಸಿ ಸಮಾಜಕ್ಕೆ ಕೊಡುಗೆಯನ್ನು ನೀಡಿ ಎಂದು ಕಿವಿ ಮಾತು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಮೇರಿಯಂಡ ಅರಸು ಅಚ್ಚಮ್ಮ ರವರು ಮಾತನಾಡಿ ಮಕ್ಕಳು ಹಿರಿಯರು ಹಾಗೂ ಗುರುಗಳಿಗೆ ಗೌರವವನ್ನು ತೋರಬೇಕು. ಶಾಲೆಯಲ್ಲಿ ಆಯೋಜಿಸಲಾಗುವ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಮತ್ತೋರ್ವ ಅತಿಥಿಗಳಾದ ವಿರಾಜಪೇಟೆ ಕೊಡವ ಸಮಾಜದ ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್ ಮಾತನಾಡಿ ಈ ವಿದ್ಯಾಸಂಸ್ಥೆಯು ಶಿಕ್ಷಣ ಕ್ಷೇತ್ರಕ್ಕೆ ತನ್ನದೇಯಾದ ಕೊಡುಗೆಯನ್ನು ನೀಡುತ್ತಾ ಬಂದಿದ್ದು ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ದೂರವಿರುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಆಪಾಡಂಡ ಕಾರ್ಯಪ್ಪ ರವರು ಮಾತನಾಡಿ ವಿದ್ಯಾರ್ಥಿಗಳು ಈ ಹಂತದಿಂದಲೇ ನಾಯಕತ್ವ ದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಸ್ತು, ಸಂಯಮ, ಸಮಯಪ್ರಜ್ಞೆ ಅತೀ ಮುಖ್ಯವಾಗಿದ್ದು ವಿದ್ಯಾರ್ಥಿಗಳು ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆಯನ್ನು ಕೊಟ್ಟರು. ಮತ್ತು ನಾಯಕತ್ವದ ಗುಣಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಪುಟ್ಟಿಚಂಡ ನವೀನ್, ಧನು, ವಿರಾಜಪೇಟೆ ಕೊಡವ ಸಮಾಜದ ಸದಸ್ಯರು, ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತದನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.









