ಕೊಡಗು ಜಿಲ್ಲಾ ವಲ್ಫ್ ಮಂಡಳಿ ಅಧ್ಯಕ್ಷರ ನೇಮಕ ವಿಚಾರ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಮಹತ್ವದ ಸಭೆ
ಮಡಿಕೇರಿ : ಶೀಘ್ರದಲ್ಲೇ ತೆರವಾಗಲಿರುವ ಕೊಡಗು ಜಿಲ್ಲಾ
ವಲ್ಫ್ ಸಲಹಾ ಮಂಡಳಿ ಅಧ್ಯಕ್ಷರ ನೇಮಕ ವಿಚಾರ ಇದೀಗ ದಿನೇ ದಿನೇ ಬಿರುಸುಕೊಳ್ಳುತ್ತಿದೆ. ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿರುವುದರಿಂದ ಪಕ್ಷದ ಹೈಕಮಾಂಡಿಗೆ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಜಿಲ್ಲೆಯ ಇಬ್ಬರು ಶಾಸಕರ ನಿರ್ದೇಶನದಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಭಾನುವಾರದಂದು ಮಹತ್ವದ ಸಭೆ ಆಯೋಜಿಸಲಾಗಿತ್ತು.
ಘಟಕದ ಅಧ್ಯಕ್ಷರಾದ ಪಿ. ಎ. ಹನೀಫ್ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಹೊರವಲಯದಲ್ಲಿರುವ ರೆಸಾರ್ಟ್ ನಲ್ಲಿ ನಡೆದ ಸಭೆಯಲ್ಲಿ ಈ ಕುರಿತು ದೀರ್ಘವಾಗಿ ಚರ್ಚಿಸಿ ಇಬ್ಬರು ಆಕಾಂಕ್ಷಿಗಳ ಪಟ್ಟಿಯನ್ನು ಶೀಘ್ರದಲ್ಲೇ ಶಾಸಕರಿಗೆ ಸಲ್ಲಿಸುವಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸುತ್ತಿರುವ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಹಮದ್ ಹಾಜಿ ಕುಂಜಿಲ ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಖಲೀಲ್ ಬಾಷ ಅವರ ಹೆಸರನ್ನು ಪಕ್ಷದ ಹೈಕಮಾಂಡ್ ಗೆ ಸಲ್ಲಿಸುವಂತೆಯೂ, ಈ ಕುರಿತು ಅಂತಿಮವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವಂತೆಯೂ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಎ.ಹಂಸ, ಸೋಮವಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎ. ಆದಮ್, ಕೊಡಗು ಜಿಲ್ಲಾ ಕಾಂಗ್ರೆಸ್ (ಡಿ.ಸಿ. ಸಿ.) ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ (ಬಾಪು ), ಜಿಲ್ಲಾ ವಖ್ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಹಮೀದ್ ಕಬಡಗೇರಿ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರ ಆಲೀರ ಎಂ. ರಶೀದ್, ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎ.ಕೆ. ಹಕೀಂ, ಡಿಸಿಸಿ ಸದಸ್ಯರಾದ ಅಬ್ದುಲ್ ರಹಿಮಾನ್ (ಅಂದಾಯಿ) ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಮೊಯ್ದಿನ್ ಕುಂಜ್ಜಿ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಎಂ.ಎಂ ಇಸ್ಮಾಯಿಲ್, ಪಿಎಂ ಹನೀಫ್, ಪ್ರಧಾನ ಕಾರ್ಯದರ್ಶಿ ಕೆ.ಎಂ. ಸಯ್ಯದ್ ಭಾವ, ಸಂಘಟನಾ ಕಾರ್ಯದರ್ಶಿ ಕುಂಡಂಡ ಎ. ರಜಾಕ್, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಕಾರೆಕಾಡು, ಎಂ.ಎ. ಮುನೀರ್ ಸೇರಿದಂತೆ ಅಲ್ಪಸಂಖ್ಯಾತರ ಘಟಕದ ಹಲವು ಪ್ರಮುಖರು ಪಾಲ್ಗೊಂಡಿದ್ದರು.








