ಆ.20 ರಂದು ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ
ಮಡಿಕೇರಿ : ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆಯನ್ನು ಇದೇ ಆಗಸ್ಟ್, 20 ರಂದು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ, ಭಾಷಣ, ರಾಷ್ಟ್ರಗೀತೆ ಸ್ಪರ್ಧೆಯನ್ನು ಆಯೋಜಿಸುವಂತಾಗಬೇಕು. ವಿಜೇತ ಮಕ್ಕಳಿಗೆ ಸೂಕ್ತ ಬಹುಮಾನ ವಿತರಿಸಲು ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ನಿಲಯಾರ್ಥಿಗಳಿಗೆ ಸನ್ಮಾನಿಸುವಂತಾಗಬೇಕು. ಡಿ.ದೇವರಾಜ ಅವರ ವಿಚಾರಧಾರೆಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಣ್ಣ ಸಣ್ಣ ಸಮಾಜಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ್ದಾರೆ. ಆ ನಿಟ್ಟಿನಲ್ಲಿ ಡಿ.ದೇವರಾಜ ಅರಸು ಅವರನ್ನು ಸದಾ ಸ್ಮರಿಸುವಂತಾಗಬೇಕು. ಡಿ.ದೇವರಾಜ ಅರಸು ಅವರ ವಿಚಾರಧಾರೆಗಳು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.
ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು, ಸಮಾಜದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.
ಹಾಗೆಯೇ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಎಸ್.ದೀಪಕ್ ಅವರು ಮಾತನಾಡಿ ಆಗಸ್ಟ್, 20 ರಂದು ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಪ್ರತೀ ವರ್ಷದಂತೆ ಈ ವರ್ಷವೂ ಆಚರಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.
ಹಿಂದುಳಿದ ವರ್ಗಗಳ ನಿಲಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿದೆ. ಹಾಗೆಯೇ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ನಿಲಯಾರ್ಥಿಗಳಿಗೆ ಸನ್ಮಾನಿಸುವ ಕಾರ್ಯಕ್ರಮ ಇದೆ ಎಂದು ತಿಳಿಸಿದರು.
ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಯಶಸ್ಸಿಗೆ ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು ಸಹಕರಿಸುವಂತೆ ಕೋರಿದರು.
ಜಿ.ಪಂ.ಉಪ ಕಾರ್ಯದರ್ಶಿ ಚಂದ್ರಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚಿದಾನಂದ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ತಹಶೀಲ್ದಾರ್ ಶ್ರೀಧರ, ಶಾಲಾ ಶಿಕ್ಷಣ ಇಲಾಖೆಯ ಕೃಷ್ಣಪ್ಪ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕವಿತಾ, ಮೋಹನ್ ಕುಮಾರ್, ವ್ಯವಸ್ಥಾಪಕರಾದ ಶಿವಶಂಕರ, ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಸವಿತಾ ಸಮಾಜ, ಗೊಲ್ಲ ಸಮಾಜ, ಕುಂಬಾರ ಸಂಘ, ವಿವಿಧ ಸಮಾಜ ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.








