ಜನವಾಹಿನಿ News ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಸಂಘರ್ಷ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ.
ಗಣೇಶ್ ಗೌಡ (38) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಗೌಡ (38) ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಬಜರಂಗದಳ ಕಾರ್ಯಕರ್ತರು ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ಗಣೇಶ್ ಮೇಲೆ ಸಂಜಯ್, ಮಿಥುನ್ ಮಚ್ಚಿನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ತಲೆ, ಕುತ್ತಿಗೆ ಹಾಗೂ ದೇಹದ ಭಾಗಗಳಿಗೆ ಮಚ್ಚಿನಿಂದ ದಾಳಿ ನಡೆಸಲಾಗಿದ್ದು, ಗಲಾಟೆಯಲ್ಲಿ ಬಜರಂಗದಳ ಕಾರ್ಯಕರ್ತ ಸಂಜಯನಿಗೂ ಗಾಯಗಳಾಗಿವೆ.
ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಂಜಯ್ ದಾಖಲಾಗಿದ್ದು, ಮಿಥುನ್ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರಿನ ಸಖರಾಯಪಟ್ಟಣದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ದತ್ತ ಜಯಂತಿ ಮುಗಿದ ಹಿನ್ನೆಲೆ ಸಖರಾಯಪಟ್ಟಣ ಬಸ್ ನಿಲ್ದಾಣ ಬಳಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಣೇಶ್ ಮುಂಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು ಎಂದು ಹೇಳಲಾಗಿದೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಆಮೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ದುಷ್ಕರ್ಮಿಗಳು ಗಣೇಶ್ ಗೌಡ ಎಂಬುವವರನ್ನು ಹತ್ಯೆ ಮಾಡಿದ್ದಾರೆ. ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಗಲಾಟೆಯಲ್ಲಿ ಭಾಗಿಯಾದ ಒಬ್ಬರು ಜಿಲ್ಲಾಪತ್ರೆಗೆ ದಾಖಲಾಗಿದ್ದು, ಸಖರಾಯಪಟ್ಟಣ ವ್ಯಾಪ್ತಿಯಲ್ಲಿ ಸೂಕ್ತ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.







