ಜನವಾಹಿನಿ News ಮಡಿಕೇರಿ : ಕೃತಕ ಬುದ್ಧಿಮತ್ತೆ (ಎಐ)ಯನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ‘ಸಂವಿಧಾನ ಮತ್ತು ಪತ್ರಿಕೋದ್ಯಮ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.
‘ಈಗ ಕೃತಕ ಬುದ್ಧಿಮತ್ತೆ (ಎಐ) ಬಂದಿದೆಯಾದರೂ, ಅದು ಎಲ್ಲವನ್ನೂ ಮಾಡುತ್ತದೆ ಎಂದು ಹೇಳಲಾಗದು. ಒಬ್ಬ ವ್ಯಕ್ತಿಯ ಬರಹದ ಮಟ್ಟಕ್ಕೆ ಎಐ ತಲುಪಲು ಸಾಧ್ಯವಾಗದು ಎಂದೆನಿಸುತ್ತದೆ. ಅದು ಮುಂದೆ ಎಷ್ಟು ಪರಿಣಾಮಕಾರಿಯಾಗಿ ಬರುತ್ತದೆ ಎಂಬುದು ಗೊತ್ತಿಲ್ಲ. ಆದರೆ, ನಾವಿಲ್ಲದೇ ಎಐ ಇರಲು ಸಾಧ್ಯವಿಲ್ಲ. ಅದನ್ನು ಸದ್ಭಳಕೆ ಮಾಡಿಕೊಂಡು ನಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.
‘ನ್ಯಾಯಾಂಗ ಮತ್ತು ಪತ್ರಿಕಾಂಗವು ಸಂವಿಧಾನ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸಂವಿಧಾನ ಉಳಿದರೆ ಮಾತ್ರ ಸ್ವಾತಂತ್ರ್ಯ ಉಳಿಯುತ್ತದೆ ಎಂಬುದನ್ನು ಎಲ್ಲರೂ ಮನಗಾಣಬೇಕು’ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ವಿವರಿಸಿದರು.







