ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಪ್ರತಿಭಟನೆಗಳು ಭುಗಿಲೆದ್ದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದು ಬಂದಿದೆ.
ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿಯೊಬ್ಬರ ಕಣ್ಣಿಗೆ ಕ್ಯಾಮೆರಾ ಬಿದ್ದಿದೆ. ಇದರ ಬೆನ್ನಲ್ಲೇ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಖಾಸಗಿತನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕ್ಯಾಮರಾದಲ್ಲಿ ದಾಖಲಾಗಿರುವ ಕೆಲ ವಿಡಿಯೋಗಳು ಬಾಲಕರ ಹಾಸ್ಟೆಲ್‌ನಲ್ಲಿ ಹರಿದಾಡುತ್ತಿವೆ ಎನ್ನಲಾಗಿದ್ದು. ನಮಗೆ ನ್ಯಾಯ ಬೇಕು ಎಂಬ ಘೋಷಣೆಗಳನ್ನು ಕೂಗುತ್ತಾ ಕಾಲೇಜಿನಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ಹಿಡನ್ ಕ್ಯಾಮೆರಾ ಇಟ್ಟವರು ಮತ್ತು ವೀಡಿಯೊಗಳನ್ನು ಪ್ರಸಾರ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಆರೋಪಿಗಳು 300ಕ್ಕೂ ಹೆಚ್ಚು ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದು, ಅವುಗಳನ್ನು ಹಣಕ್ಕಾಗಿ ಇತರರಿಗೆ ಮಾರಾಟ ಮಾಡಿದ್ದಾರೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಈ ನಡುವೆ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಯಾವುದೇ ಹಿಡನ್ ಕ್ಯಾಮೆರಾಗಳು ಪತ್ತೆಯಾಗಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿಕೊಂಡಿದ್ದು, ಪೊಲೀಸ್ ತನಿಖೆಗೆ ಸಹಕರಿಸುವುದಾಗಿ ತಿಳಿಸಿದೆ.







